ಗಾಂಧೀಜಿ ಚಿಂತನೆ ಸಾಕಾರಕ್ಕೆ ಸಮ್ಮಿಶ್ರ ಸರ್ಕಾರ ಶ್ರಮ: ಸಚಿವ ಹೆಚ್.ಡಿ ರೇವಣ್ಣ
Posted by editor on

ಹಾಸನ: ಗ್ರಾಮ ಸ್ವರಾಜ್ಯದ ಕನಸು ಕಂಡ ಮಹಾನ್ ಪುರುಷ ಮಹಾತ್ಮ ಗಾಂಧಿ ಅವರ ಚಿಂತನೆಗಳನ್ನು ಸಾಕಾರಗೊಳಿಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದು ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದರು.
ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.
ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಹಾಸನ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಸಹಯೋಗದೊಂದಿಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನ ಮಂತ್ರಿಗಳಾದ ದಿ. ಲಾಲ್‍ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಹಿಂಸೆ, ಸತ್ಯಾಗ್ರಹ ಮತ್ತು ಹೋರಾಟದ ಮೂಲಕ ಜಗತ್ತನ್ನು ಗೆದ್ದ ಮಹಾನ್ ಪುರುಷ ಮಹಾತ್ಮ ಗಾಂಧಿ ಅವರು ಇಡೀ ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ್ದಾರೆ ಅವರ ತತ್ವಾದರ್ಶಗಳನ್ನು ಪಾಲಿಸೋಣ ಎಂದರು. ಹಳ್ಳಿಗಳ ಅಭಿವೃದ್ಧಿ ಆದರೆ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಮಹಾತ್ಮ ಗಾಂಧಿ ಅವರು ಗುಡಿ ಕೈಗಾರಿಕೆ, ಸ್ವಯಂ ಉದ್ಯೋಗಕ್ಕೆ ಹೆಚ್ಚು ಒತ್ತು ನೀಡಿದ್ದರು. ಈ ನಿಟ್ಟಿನಲ್ಲಿ ಗ್ರಾಮಗಳ ವಿಕಾಸಕ್ಕೆ ಮುತುರ್ವಜಿವಹಿಸಿ ಮೂಲ ಸೌಕರ್ಯ ಒದಗಿಸುವುದರ ಜೊತೆಗೆ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಸಚಿವರು ತಿಳಿಸಿದರು. ಇದಕ್ಕೂ ಮುನ್ನ ಸಚಿವರು ಮಹಾತ್ಮ ಗಾಂಧಿ ಮತ್ತು ಲಾಲ್‍ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.