ನಿರಂತರ ಮಳೆ: ತ್ವರಿತಗತಿ ಕಾರ್ಯನಿರ್ವಹಿಸಿ : ತುಷಾರ್ ಗಿರಿ ನಾಥ್ ಸೂಚನೆ
Posted by editor on in Category
08
49

ಬೆಂಗಳೂರು: ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯ ಸಂಬಂಧ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಮಾತನಾಡಿದರು. ಮುಂಜಾನೆಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲಾ ಅಧಿಕಾರಿಗಳು ಮುಂಜಾಗ್ರತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಎಲ್ಲಿಯೂ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಪೀಡಿತ ಪ್ರದೇಶಗಳ ಬಳಿ ನಿಗಾವಹಿಸಬೇಕು. ಏನಾದರು ಸಮಸ್ಯೆಯಾಗುವ ಸಂಭವವಿದ್ದರೆ ಸ್ಥಳೀಯ ನಿವಾಸಿಗಳನ್ನು ಕೂಡಲೆ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವ ವ್ಯವಸ್ಥೆ ಮಾಡಬೇಕೆಂದು ತಿಳಿಸಿದರು. ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಿ: ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ರಸ್ತೆಗಳಲ್ಲಿ ನೀರು ನಿಂತು ಜಲಾವೃತವಾಗುವ ಕಾರಣ ಹೆಚ್ಚು ಸಂಚಾರ ದಟ್ಟಣೆಯಾಗಲಿದೆ. ಈ ಸಂಬಂಧ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಅಧಿಕಾರಿಗಳು ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಪರಿಶೀಲನೆ ನಡೆಸಿ ನೀರು ನಿಲ್ಲದಂತೆ ಸೂಕ್ತ ಕ್ರಮ ವಹಿಸಬೇಕು. ಪಾಲಿಕೆ ಸಿಬ್ಬಂದಿಯ ಸಹಯೋಗದೊಂದಿಗೆ ಗ್ರೇಟಿಂಗ್ಸ್ ಗಳ ಬಳಿ ತ್ಯಾಜ್ಯವನ್ನು ಸ್ವಚ್ಛಗೊಳಿಸಿ ಸೈಡ್ ಡ್ರೈನ್‌ಗಳಿಗೆ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.