ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ 5 ಲಕ್ಷ ಪರಿಹಾರ
Posted by editor on in Category
08
49

ಬೆಂಗಳೂರು: ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಮಳೆಯಿಂದ ಸಮಸ್ಯೆಗೆ ಒಳಗಾಗಿರುವ ಯಲಹಂಕದ ಕೇಂದ್ರಿಯ ವಿಹಾರ ವಸತಿ ಸಮುಚ್ಚಯ, ಬ್ಯಾಟರಾಯನಪುರದ ಮರಿಯಣ್ಣಪಾಳ್ಯ, ಕೆ ಆರ್ ಪುರಂನ ಹೊರಮಾವಿನ ಶ್ರೀ ಸಾಯಿ ಬಡಾವಣೆಗೆ ಶಿವಕುಮಾರ್ ಅವರು ಪಾಲಿಕೆ ಅಧಿಕಾರಿಗಳ ತಂಡದೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪರಿಹಾರ ಕಾರ್ಯ ವೀಕ್ಷಣೆ ಜತೆಗೆ ಅಪಾರ್ಟ್ ಮೆಂಟ್ ನಿವಾಸಿಗಳ ಸಂಘದ ಸದಸ್ಯರ ಜತೆ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿದರು. ಎಸ್ ಡಿಆರ್ ಎಫ್ ಮತ್ತು ಎನ್ ಡಿಆರ್ ಎಫ್ ಸಿಬ್ಬಂದಿ ಜತೆ ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಸ್ಥಳಾಂತರಗೊಂಡ ನಿವಾಸಿಗಳಿಗೆ ಸೂಕ್ತ ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ಮಾತನಾಡಿದ ಡಿಸಿಎಂ ಅವರು, “ನೀರುಗಾಲುವೆ ಸ್ವಚ್ಛತಾ ಕೆಲಸದ ವಿಚಾರವಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡರು ಕೆಲಸ ಮಾಡುತ್ತಿದ್ದಾರೆ. ಎನ್ ಡಿಆರ್ ಎಫ್ ಅನುದಾನ ಸೇರಿದಂತೆ ವಿವಿಧ ಯೋಜನೆಗಳ ಅಡಿ ಕೆರೆಗಳ ಸ್ವಚ್ಚತೆ, ಹೂಳು ತೆಗೆಯುವ ಕೆಲಸ ಮಾಡಲಾಗುವುದು. ಶೀಘ್ರದಲ್ಲೇ ಕೆರೆ ನಿರ್ವಹಣಾ ಸಮಿತಿಯ ಸಭೆ ಕರೆಯಲಾಗುವುದು” ಎಂದು ಹೇಳಿದರು.